ಆನೇಕಲ್ ಪೊಲೀಸರ ಭರ್ಜರಿ ಕಾರ್ಯಾಚರಣೆ: 18 ಲಕ್ಷ ಮೌಲ್ಯದ ಕೊಕೇನ್ ಸಹಿತ ನೈಜೀರಿಯಾ ಮೂಲದ ಮಹಿಳೆ ಬಂಧನ
Correspondent /Mallikarjun /Anekal/SM News Desk
ಆನೇಕಲ್ ಜೂ.2 : ಬೆಂಗಳೂರು ನಗರ ಜಿಲ್ಲೆ ಆನೇಕಲ್ ಉಪವಿಭಾಗದ ಪೊಲೀಸರು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ಮಾದಕ ವಸ್ತು ಜಾಲಕ್ಕೆ ಸಂಬಂಧಿಸಿದ ವಿದೇಶಿ ಮಹಿಳೆಯನ್ನು ಬಂಧಿಸಿ, ಲಕ್ಷಾಂತರ ರೂಪಾಯಿ ಮೌಲ್ಯದ ಕೊಕೇನ್ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಬಂಧಿತೆಯನ್ನು ನೈಜೀರಿಯಾ ಮೂಲದ ಬ್ಲೆಸ್ಸಿಂಗ್ ಒಪುಟಾ (34) ಎಂದು ಗುರುತಿಸಲಾಗಿದೆ. ಆರೋಪಿತೆಯ ಬಳಿಯಿಂದ ಸುಮಾರು 180 ಗ್ರಾಂ ಕೊಕೇನ್‌ನ್ನು ವಶಪಡಿಸಿಕೊಳ್ಳಲಾಗಿದ್ದು, ಇದರ ಮೌಲ್ಯ ಸುಮಾರು ₹18 ಲಕ್ಷ ಎಂದು ಅಂದಾಜಿಸಲಾಗಿದೆ.
ಆನೇಕಲ್ ವ್ಯಾಪ್ತಿಯ ಅಲಯನ್ಸ್ ಕಾಲೇಜು ಸಮೀಪ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ನಡೆಸಿದರು. ಈ ವೇಳೆ ಆರೋಪಿತೆ ಕಾಲೇಜು ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಮಾದಕ ವಸ್ತುಗಳ ಮಾರಾಟದಲ್ಲಿ ತೊಡಗಿದ್ದಾಳೆ ಎಂಬ ಮಾಹಿತಿ ಬಹಿರಂಗವಾಗಿದೆ.
ಆನೇಕಲ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಆರ್. ಪ್ರಕಾಶ್ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಆರೋಪಿತೆಯನ್ನು ಬಂಧಿಸಿ, ಆಕೆಯ ಬಳಿಯಿದ್ದ ಕೊಕೇನ್ ವಶಪಡಿಸಿಕೊಳ್ಳಲಾಗಿದೆ.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿತೆಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದು, ಮಾದಕ ವಸ್ತು ಜಾಲದ ಇತರೆ ಸಂಪರ್ಕಗಳ ಕುರಿತು ತನಿಖೆ ಮುಂದುವರೆಸಿದ್ದಾರೆ.
